
ಮೈಸೂರು : ಈ ಬಾರಿಯ ನಾಡ ಹಬ್ಬ ಮೈಸೂರು ದಸರಾ ಉತ್ಸವವನ್ನು ಉದ್ಘಾಟಿಸಲು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರನ್ನು ಆಹ್ವಾನಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಚ್ಛಿಸಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿದ್ದಾರೆ.
ಸೋನಿಯಾ ಗಾಂಧಿ ಅವರ ಕಡೆಯಿಂದ ಯಾವುದೇ ಪ್ರತಿಕ್ರಿಯೆ ಬಾರದ ಕಾರಣ, ದಸರಾ ಉದ್ಘಾಟನೆಗೆ ಖುದ್ದಾಗಿ ಆಹ್ವಾನಿಸಲು ಸಿಎಂ ಸಿದ್ದರಾಮಯ್ಯ ಅವರು ದೆಹಲಿಗೆ ತೆರಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಕಳೆದ ವರ್ಷದ ದಸರಾಗೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಹ್ವಾನಿಸಲಾಗಿತ್ತು. ಈ ವರ್ಷ ರಾಷ್ಟ್ರ ಮಟ್ಟದ ಮತ್ತೊಬ್ಬ ಪ್ರಮುಖ ನಾಯಕಿಯನ್ನು ಆಹ್ವಾನಿಸುವ ಮೂಲಕ ದಸರಾ ಉತ್ಸವಕ್ಕೆ ಹೆಚ್ಚಿನ ಮೆರುಗು ನೀಡುವ ಉದ್ದೇಶ ಸಿಎಂ ಅವರಿಗಿದೆ ಎಂದು ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ.