
ಬೆಂಗಳೂರು: ಅನರ್ಹ ಬಿಪಿಎಲ್ ಫಲಾನುಭವಿಗಳನ್ನು ಪತ್ತೆ ಹಚ್ಚಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಮಿತಿ ರಚಿಸಿ, ಮನೆ ಮನೆಗೆ ಭೇಟಿ ನೀಡಿ ಖುದ್ದಾಗಿ ಪರಿಶೀಲನೆ ನಡೆಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ತಿಳಿಸಿದ್ದಾರೆ.
ವಿಧಾನಪರಿಷತ್‌ನಲ್ಲಿ ಬಿಜೆಪಿ ಸದಸ್ಯ ಸಿ.ಟಿ. ರವಿ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಸುಮಾರು 20 ಲಕ್ಷ ಅನರ್ಹರು ಬಿಪಿಎಲ್ ಕಾರ್ಡ್ ಪಡೆದಿರುವುದು ಪತ್ತೆಯಾಗಿದೆ. ಇವರು ಎಪಿಎಲ್ ಕಾರ್ಡ್ ಪಡೆಯಬೇಕಾಗಿತ್ತು.ಈ ಹಿಂದೆ ಪಡಿತರ ಚೀಟಿ ಪರಿಷ್ಕರಣೆಗೆ ವಿರೋಧ ವ್ಯಕ್ತವಾಗಿತ್ತು. ಹೀಗಾಗಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪಿಡಿಒ, ಗ್ರಾಮ ಲೆಕ್ಕಿಗರು ಸೇರಿ ಸಮಿತಿ ರಚಿಸಿ ಪರಿಶೀಲನೆಗೆ ಮುಂದಾಗಿದೆ. ಸುಮಾರು 91 ಸಾವಿರ ಅರ್ಜಿಗಳು ಇನ್ನೂ ಬಾಕಿ ಇರುತ್ತದೆ. ಇನ್ನು ಎರಡು ತಿಂಗಳಲ್ಲಿ ಬಿಪಿಎಲ್ ಪಡಿತರ ಚೀಟಿ ವಿತರಣೆ ಪ್ರಕ್ರಿಯೆ ಆರಂಭಿಸಲಾಗುವುದು. ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ನು ಅನುಸರಿಸಿ ಪರಿಷ್ಕರಣೆ ಮಾಡಲಾಗುವುದು ಎಂದು ತಿಳಿಸಿದರು.
ಸಿ.ಟಿ. ರವಿಯವರು ಹೊಸ ಅರ್ಜಿಗಳನ್ನು ಸ್ವೀಕರಿಸದೆ ಸಮಸ್ಯೆ ಉಲ್ಬಣಗೊಂಡಿರುವ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಕಾಲಮಿತಿಯಲ್ಲಿ ಪಡಿತರ ಚೀಟಿ ವಿತರಣೆ ಮಾಡಬೇಕೆಂದೂ ಆಗ್ರಹಿಸಿದರು.