
ಮೈಸೂರು, ಏಪ್ರಿಲ್ 9 : ದ್ವಿತೀಯ ಪಿಯುಸಿ ಯಲ್ಲಿ ಅನುತ್ತೀರ್ಣಳಾದ ಹಿನ್ನೆಲೆ ಮನನೊಂದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ದುಃಖದ ಘಟನೆ ಮೈಸೂರಿನಲ್ಲಿ ನಡೆದಿದೆ. ನಗರದ ಕಲಾಮಂದಿರ ಅಪಾರ್ಟ್‌ಮೆಂಟ್‌ನಲ್ಲಿ ಈ ಘಟನೆ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಐಶ್ವರ್ಯ (17) ಎಂದು ಗುರುತಿಸಲಾಗಿದೆ. ಮೈಸೂರಿನ ಒಂಟಿಕೊಪ್ಪಲಿನ ಸರ್ಕಾರಿ ಪಿಯು ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಈಕೆ, ಪರೀಕ್ಷೆಯಲ್ಲಿ ಫೇಲ್ ಆಗಿರುವುದು ತಿಳಿದ ಕೂಡಲೇ ಗಂಭೀರ ನಿರಾಶೆಗೆ ಒಳಗಾಗಿದ್ದಳು. ಸೋಮವಾರ ಮಧ್ಯಾಹ್ನ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ, ಆಕೆ ಫ್ಯಾನ್‌ಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಈ ವಿಷಯ ಬೆಳಕಿಗೆ ಬಂದ ತಕ್ಷಣ ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿದ್ಯಾರ್ಥಿನಿಯ ಈ ಕೃತ್ಯದಿಂದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
ಈ ಘಟನೆಗೆ ಸಂಬಂಧಿಸಿದಂತೆ ಮೈಸೂರಿನ ಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ. ವಿದ್ಯಾರ್ಥಿಗಳ ಮಾನಸಿಕ ಒತ್ತಡ, ಪರೀಕ್ಷಾ ಫಲಿತಾಂಶದ ಭಯ, ಮತ್ತು ನಿರೀಕ್ಷೆಗಳ ಒತ್ತಡಗಳು ಇಂಥ ದುರ್ಘಟನೆಗಳಿಗೆ ಕಾರಣವಾಗುತ್ತಿರುವುದಾಗಿ ಶಿಕ್ಷಣ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.