
ನವದೆಹಲಿ: ಕರ್ನಾಟಕದಲ್ಲಿ ಸಚಿವರು, ಶಾಸಕರು, ರಾಜಕೀಯ ಮುಖಂಡರು ಹಾಗೂ ನ್ಯಾಯಮೂರ್ತಿಗಳನ್ನು ಗುರಿಯಾಗಿಟ್ಟುಕೊಂಡು ನಡೆದ ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.
ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ ವಿಕ್ರಮ್‌ನಾಥ್ ನೇತೃತ್ವದ ತ್ರಿಸದಸ್ಯ ಪೀಠವು ಅರ್ಜಿದಾರ ಬಿನಯ್ ಕುಮಾರ್ ಸಿಂಗ್ ಅವರನ್ನು ತರಾಟೆಗೆ ತೆಗೆದುಕೊಂಡು, “ನೀವು ಜಾರ್ಖಂಡ್ ಮೂಲದವರು, ಕರ್ನಾಟಕಕ್ಕೂ ನಿಮಗೂ ಏನು ಸಂಬಂಧ? ನ್ಯಾಯಾಧೀಶರು ಯಾಕೆ ಹನಿಟ್ರ್ಯಾಪ್‌ಗೆ ಒಳಗಾಗಬೇಕು? ಸುಪ್ರೀಂ ಕೋರ್ಟ್ ರಾಜಕೀಯ ದೋಷಾರೋಪಣೆಗಳಿಗೆ ವೇದಿಕೆ ಅಲ್ಲ” ಎಂದು ಕಿಡಿಕಾರಿದೆ.
ಹನಿಟ್ರ್ಯಾಪ್ ಪ್ರಕರಣದ ಹಿನ್ನಲೆ :
ಕರ್ನಾಟಕದ ಕೆಲ ಹಿರಿಯ ನಾಯಕರನ್ನು ಗುರಿಯಾಗಿಟ್ಟುಕೊಂಡು ಹನಿಟ್ರ್ಯಾಪ್ ಪ್ರಕರಣ ನಡೆದಿದ್ದು, ಈ ಬಗ್ಗೆ ಸಚಿವರೇ ವಿಧಾನಸಭೆಯಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಸಿಬಿಐ ಅಥವಾ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ಎಸ್‌ಐಟಿ ತನಿಖೆ ನಡೆಸುವಂತೆ ಅರ್ಜಿದಾರರು ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದರು. ಆದರೆ, ಸುಪ್ರೀಂ ಕೋರ್ಟ್ ಈ ಅರ್ಜಿಯನ್ನು ತಿರಸ್ಕರಿಸಿ, ಇದನ್ನು ಸಂಬಂಧಪಟ್ಟ ಪ್ರಾಧಿಕಾರಗಳು ನಿರ್ವಹಿಸಬೇಕೆಂದು ಅಭಿಪ್ರಾಯಪಟ್ಟಿದೆ.
ಮುಂದಿನ ಹಂತ :
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರ ಈಗಾಗಲೇ ತನಿಖೆ ನಡೆಸುತ್ತಿರುವುದರಿಂದ, ಮುಂದಿನ ಹಂತದಲ್ಲಿ ರಾಜ್ಯ ಸರ್ಕಾರ ಅಥವಾ ನ್ಯಾಯಾಂಗ ಏನೊಂದು ನಿರ್ಧಾರ ಕೈಗೊಳ್ಳಬಹುದಾದ ಸಾಧ್ಯತೆಯಿದೆ. ಈ ಪ್ರಕರಣದ ಬಗ್ಗೆ ರಾಜ್ಯದ ರಾಜಕೀಯ ವಲಯದಲ್ಲಿ ಚರ್ಚೆಗಳು ತೀವ್ರಗೊಂಡಿವೆ.