
ಸುರತ್ಕಲ್ : ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ಸಮೀಪದ ಮಧ್ಯ ಮಾಧವನಗರದಲ್ಲಿ ಬುಧವಾರ ಬೆಳಿಗ್ಗೆ ನಡೆದ ಭಾರೀ ರಸ್ತೆ ಅಪಘಾತದಲ್ಲಿ ಹಲವರು ಗಾಯಗೊಂಡಿದ್ದಾರೆ. ಚೇಳೈರುನಿಂದ ಸುರತ್ಕಲ್ ಕಡೆಗೆ ಚಲಿಸುತ್ತಿದ್ದ ನಂದನ ಟ್ರಾವೆಲ್ಸ್ ಬಸ್‌ನ ಸ್ಟೀರಿಂಗ್ ಜಾಮ್ ಆದ ಪರಿಣಾಮ, ಎದುರಿನಿಂದ ಬರುತ್ತಿದ್ದ ಇಲೆಕ್ಟ್ ಬಸ್‌ಗೆ ತಿರುವಿನಲ್ಲಿ ಮುಖಾಮುಖಿ ಡಿಕ್ಕಿ ಹೊಡೆದ ಘಟನೆ ನಡೆದಿದೆ.
ಅಪಘಾತದ ತೀವ್ರತೆಗೆ ಎರಡೂ ಬಸ್‌ಗಳಿಗೆ ಹಾನಿಯಾಗಿದೆ. ಈ ಘಟನೆಯಲ್ಲಿ ಚೇಳೈರು ಸರಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು, ಕೆಲ ಶಿಕ್ಷಕರು, ಬಸ್ ಚಾಲಕರು ಹಾಗೂ ಶ್ರೀನಿವಾಸ ಕಾಲೇಜಿನ ಕೆಲವು ವಿದ್ಯಾರ್ಥಿಗಳು ಅಲ್ಪವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮುಲ್ಕಿಯ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದ ದೃಶ್ಯಾವಳಿಗಳ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರಲ್ಲಿ ಆತಂಕ ಉಂಟುಮಾಡಿದೆ. ಈ ಸಂಬಂಧ ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.