
ಲಕ್ನೋ: ಉತ್ತರ ಪ್ರದೇಶದ ಕೌಶಂಬಿ ಜಿಲ್ಲೆಯ ಸರ್ಕಾರಿ ಶಾಲೆಯ ಪ್ರಾಂಶುಪಾಲರೊಬ್ಬರ ವಿರುದ್ಧ ವಿದ್ಯಾರ್ಥಿನಿಯರಿಗೆ ಅಶ್ಲೀಲ ವಿಡಿಯೋಗಳನ್ನು ತೋರಿಸಿದ ಮತ್ತು ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ.
ಸಾರಸಾವಾ ಬ್ಲಾಕ್‌ನಲ್ಲಿರುವ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. ಪ್ರಾಂಶುಪಾಲ ನಂದ್‌ಲಾಲ್ ಸಿಂಗ್ ಅವರು ಸರ್ಕಾರದಿಂದ ನೀಡಲಾದ ಟ್ಯಾಬ್ಲೆಟ್‌ನಲ್ಲಿ ವಿದ್ಯಾರ್ಥಿನಿಯರಿಗೆ ಅಶ್ಲೀಲ ವೀಡಿಯೊಗಳನ್ನು ತೋರಿಸುತ್ತಿದ್ದರು ಮತ್ತು ಅವರನ್ನು ಅನುಚಿತವಾಗಿ ಸ್ಪರ್ಶಿಸುತ್ತಿದ್ದರು ಎಂದು ವಿದ್ಯಾರ್ಥಿಗಳು ತಮ್ಮ ಕುಟುಂಬಗಳಿಗೆ ತಿಳಿಸಿದ್ದಾರೆ. ಅವರ ಈ ದುಷ್ಕೃತ್ಯಗಳಿಗೆ ವಿರೋಧ ವ್ಯಕ್ತಪಡಿಸಿದಾಗ, ಅವರು ವಿದ್ಯಾರ್ಥಿನಿಯರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ವಿದ್ಯಾರ್ಥಿನಿಯರು ತಮ್ಮ ಕುಟುಂಬಗಳ ಬಳಿ ವಿಷಯವನ್ನು ಹೇಳಿಕೊಂಡ ನಂತರ, ಕೋಪಗೊಂಡ ಪೋಷಕರು ಮತ್ತು ಗ್ರಾಮಸ್ಥರು ಶಾಲೆಗೆ ತೆರಳಿ ಪ್ರಾಂಶುಪಾಲರನ್ನು ತರಾಟೆಗೆ ತೆಗೆದುಕೊಂಡರು. ಈ ವೇಳೆ, ಅವರ ಮೇಲೆ ಹಲ್ಲೆ ನಡೆಸಿದ್ದು, ಈ ಘರ್ಷಣೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.
ನಂತರ, ಪೋಷಕರು ಮಂಜನ್‌ಪುರ ಪೊಲೀಸ್ ಠಾಣೆಯಲ್ಲಿ ಪ್ರಾಂಶುಪಾಲರ ವಿರುದ್ಧ ಔಪಚಾರಿಕ ದೂರು ದಾಖಲಿಸಿದ್ದಾರೆ. ದೂರು ಸ್ವೀಕರಿಸಿದ ಕೂಡಲೇ ಪೊಲೀಸರು ಕ್ರಮ ಕೈಗೊಂಡು ಆರೋಪಿಯನ್ನು ಬಂಧಿಸಿದ್ದಾರೆ ಎಂದು ಡಿಎಸ್‌ಪಿ (ಸದರ್) ಶಿವಾಂಕ್ ಸಿಂಗ್ ದೃಢಪಡಿಸಿದ್ದಾರೆ. ಪ್ರಕರಣದ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದು, ಮುಂದಿನ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.