
ತೀರ್ಥಹಳ್ಳಿ: ಮಲೆನಾಡಿನ ಹೆಬ್ಬಾಗಿಲು ತೀರ್ಥಹಳ್ಳಿ ತಾಲೂಕಿನ ಭಾರತೀಪುರ ಸಮೀಪ ಬುಧವಾರ ಬೆಳಗಿನ ಜಾವ ಭೀಕರ ರಸ್ತೆ ದುರಂತವೊಂದು ಸಂಭವಿಸಿದೆ. ಕೆಎಸ್‌ಆರ್‌ಟಿಸಿ ಬಸ್ ಹಾಗೂ ಸ್ವಿಫ್ಟ್ ಡಿಸೈರ್ ಕಾರಿನ ನಡುವೆ ನಡೆದ ಈ ಮುಖಾಮುಖಿ ಡಿಕ್ಕಿಯಲ್ಲಿ ಮೂವರು ಪ್ರಯಾಣಿಕರು ಸಾವನ್ನಪ್ಪಿದ್ದು, ಹಲವರು ತೀವ್ರವಾಗಿ ಗಾಯಗೊಂಡಿದ್ದಾರೆ.
ಮೃತರನ್ನು ಶೃಂಗೇರಿ ತಾಲೂಕಿನ ಕಿಗ್ಗಾ ಮೂಲದ ಫಾತಿಮಾ (76) ಹಾಗೂ ಇಬ್ಬರು ಬಾಲಕರಾದ ರಿಹಾನ್ (15) ಮತ್ತು ರಾಹಿಲ್ (9) ಎಂದು ಗುರುತಿಸಲಾಗಿದೆ. ಈ ದುರ್ಘಟನೆಯಲ್ಲಿ ಕಾರಿನಲ್ಲಿದ್ದ ಮಗು ಸೇರಿದಂತೆ ಉಳಿದ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ದುರಂತದ ವಿವರ: ಮದುವೆ ಸಮಾರಂಭವೊಂದರಲ್ಲಿ ಪಾಲ್ಗೊಳ್ಳಲು ಚನ್ನಗಿರಿಗೆ ತೆರಳಿದ್ದ ಈ ಕುಟುಂಬವು ಕಾರ್ಯಕ್ರಮ ಮುಗಿಸಿ ಸ್ವಗ್ರಾಮ ಕಿಗ್ಗಾಕ್ಕೆ ಮರಳುತ್ತಿತ್ತು. ಈ ವೇಳೆ ತೀರ್ಥಹಳ್ಳಿಯಿಂದ ಬೆಂಗಳೂರಿನತ್ತ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಮತ್ತು ಇವರ ಕಾರು ಭಾರತೀಪುರ ಕೆರೆ ಬಳಿಯ ತಿರುವಿನಲ್ಲಿ ಡಿಕ್ಕಿಯಾಗಿವೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಸ್ಥಳದಲ್ಲಿ ಹರಡಿದ ರಕ್ತದ ಮಡುವಿನ ದೃಶ್ಯ ಮನಕಲಕುವಂತಿತ್ತು. ಮಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.



































