
ಉಡುಪಿ: ಮಣಿಪಾಲದ ರಾಹುಲ್ ನಗರದ ಒಂದು ಬಾಡಿಗೆ ಮನೆಯಲ್ಲಿ ಒಬ್ಬರು ಹಣಕಾಸು ವ್ಯವಹಾರ ನಡೆಸುತ್ತಿದ್ದ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ವರದಿಯಾಗಿದೆ.
ಮೃತಪಟ್ಟವರನ್ನು ಆರ್. ಸೆಲ್ವರಾಜ್ ಎಂದು ಗುರುತಿಸಲಾಗಿದೆ. ಇವರು ಹಣಕಾಸು ವ್ಯವಹಾರದಲ್ಲಿ ತೊಡಗಿಕೊಂಡಿದ್ದು, ರಾಹುಲ್ ನಗರದಲ್ಲಿ ಬಾಡಿಗೆ ಮನೆಯಲ್ಲಿ ಏಕಾಂಗಿಯಾಗಿ ವಾಸಿಸುತ್ತಿದ್ದರು ಎಂದು ತಿಳಿದು ಬಂದಿದೆ. ಮನೆಯೊಳಗೆ ಹಾಸಿಗೆಯ (ಬೆಡ್) ಮೇಲೆ ಮಲಗಿದ್ದ ಸ್ಥಿತಿಯಲ್ಲೇ ಅವರು ಮೃತಪಟ್ಟಿದ್ದಾರೆ.
ವ್ಯಕ್ತಿಯ ಸಾವಿಗೆ ಸ್ಪಷ್ಟವಾದ ಕಾರಣ ಇನ್ನೂ ತಿಳಿದು ಬಂದಿಲ್ಲ. ಘಟನೆಯ ಬಗ್ಗೆ ಮಾಹಿತಿ ಲಭಿಸುತ್ತಿದ್ದಂತೆ ಮಣಿಪಾಲ ಪೋಲಿಸ್ ಠಾಣೆಯ ಸಹಾಯಕ ಸಬ್ ಇನ್ಸ್‌ಪೆಕ್ಟರ್ (ಎಎಸ್‌ಐ) ವಿಜಯ್ ಅವರು ಸಿಬ್ಬಂದಿಗಳಾದ ಶಶಿಧರ್ ಮತ್ತು ಸುರೇಶ್ ಶೆಟ್ಟಿ ಅವರೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಕಾನೂನು ಪ್ರಕ್ರಿಯೆಗಳನ್ನು ಕೈಗೊಂಡರು.
ಈ ಸಂದರ್ಭದಲ್ಲಿ ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರು ಪೋಲಿಸ್ ಇಲಾಖೆಗೆ ಸಹಕಾರ ನೀಡಿದರು. ಕೊಳೆತ ಕಳೇಬರವನ್ನು ಪ್ಲಾಸ್ಟಿಕ್ ಹೊದಿಕೆಯಲ್ಲಿ ಭದ್ರಪಡಿಸಿ, ಅದನ್ನು ಮರಣೋತ್ತರ ಪರೀಕ್ಷೆಗಾಗಿ ಸೂಕ್ತ ಕೇಂದ್ರಕ್ಕೆ ಸಾಗಿಸಲು ವ್ಯವಸ್ಥೆಗೊಳಿಸಿದರು. ಘಟನೆಯ ಕುರಿತು ಹೆಚ್ಚಿನ ತನಿಖೆ ಮುಂದುವರೆದಿದೆ.
































