
ಉಡುಪಿ: ಜಾನಪದ ಕಲೆ ಮತ್ತು ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ದಾಟಿಸುವ ನಿಟ್ಟಿನಲ್ಲಿ ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾ ಮಹಿಳಾ ಘಟಕದ ಉದ್ಘಾಟನೆ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಮಣಿಪಾಲದ ಸರಳೀಬೆಟ್ಟು ರತ್ನ ಸಂಜೀವ ಕಲಾಭವನದಲ್ಲಿ ಫೆಬ್ರವರಿ 28ರಂದು ಅದ್ಧೂರಿಯಾಗಿ ಜರುಗಿತು.
ಕಾರ್ಯಕ್ರಮವನ್ನು ಬೆಂಗಳೂರಿನ ಕನ್ನಡ ಜಾನಪದ ಪರಿಷತ್ ರಾಜ್ಯಾಧ್ಯಕ್ಷರಾದ ಡಾ. ಜಾನಪದ ಎಸ್. ಬಾಲಾಜಿ ಅವರು ಉದ್ಘಾಟಿಸಿ, ಸಂಘಟನೆಯ ಬೆಳವಣಿಗೆಗೆ ಶುಭ ಹಾರೈಸಿದರು. ಶಿವಪ್ರೇರಣಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಹಾಗೂ ಕರ್ನಾಟಕ ರಾಜ್ಯ ಅಥ್ಲೆಟಿಕ್ ಅಸೋಸಿಯೇಷನ್ ಉಪಾಧ್ಯಕ್ಷರಾದ ಮಹೇಶ್ ಠಾಕೂರ್ ಅವರು ಅತಿಥಿಯಾಗಿ ಭಾಗವಹಿಸಿದ್ದರು. ಜಾನಪದ ಕಲೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಗೆ ಅವರು ನೀಡುತ್ತಿರುವ ನಿರಂತರ ಬೆಂಬಲವನ್ನು ಗುರುತಿಸಿ, ಅವರಿಗೆ ಈ ಸಂದರ್ಭದಲ್ಲಿ “ಜಾನಪದ ಪ್ರಚಂಡ” ಜಿಲ್ಲಾ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಡಾ. ಶಿವರಾಮ ಕಾರಂತ ಟ್ರಸ್ಟ್ ಅಧ್ಯಕ್ಷ ಡಾ. ಗಣನಾಥ ಎಕ್ಕಾರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ವಿಭಾಗೀಯ ಸಂಚಾಲಕಿ ಡಾ. ಭಾರತಿ ಮರವಂತೆ, ಜಿಲ್ಲಾ ಘಟಕದ ಅಧ್ಯಕ್ಷೆ ಉಷಾ ಹೆಬ್ಬಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಪುತ್ತಿಗೆ ಮಠದ ದಿವಾನರಾದ ನಾಗರಾಜ ಆಚಾರ್ಯ, ನಗರಸಭಾ ಮಾಜಿ ಸದಸ್ಯ ನರಸಿಂಹ ನಾಯಕ್ ಹಾಗೂ ರಾಘವೇಂದ್ರ ಪ್ರಭು ಕರ್ವಾಲು ಉಪಸ್ಥಿತರಿದ್ದರು. ಸಮಾರಂಭದ ಅಂಗವಾಗಿ ಪರಿಷತ್ ಸದಸ್ಯರಿಂದ ಆಕರ್ಷಕ ಸಂಗೀತ ಕಾರ್ಯಕ್ರಮ ಪ್ರದರ್ಶನಗೊಂಡಿತು.




































