
ಉಡುಪಿ: ಐತಿಹಾಸಿಕ ಪರ್ಯಾಯ ಮೆರವಣಿಗೆಯ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ಕೇಸರಿ ಧ್ವಜವನ್ನು ಹಿಡಿದು ಚಾಲನೆ ನೀಡಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕ ವಿ. ಸುನೀಲ್ ಕುಮಾರ್ ಕಿಡಿಕಾರಿದ್ದಾರೆ. ಹಿಂದುಗಳ ಪವಿತ್ರ ಧಾರ್ಮಿಕ ಆಚರಣೆಯಲ್ಲಿ ಕೇಸರಿ ಧ್ವಜ ಬಳಸದೆ ಕಾಂಗ್ರೆಸ್ ಬಾವುಟ ಅಥವಾ ಹಸಿರು ಧ್ವಜ ಹಾರಿಸಬೇಕಿತ್ತೇ? ಎಂದು ಅವರು ಪ್ರಶ್ನಿಸಿದ್ದಾರೆ.
ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾನೂನು ಘಟಕವು ಜಿಲ್ಲಾಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದಿರುವ ಕ್ರಮವು ಅವರ ಸಂಕುಚಿತ ಮನಸ್ಥಿತಿಯನ್ನು ತೋರಿಸುತ್ತದೆ ಎಂದು ಅವರು ಟೀಕಿಸಿದ್ದಾರೆ. “ಧಾರ್ಮಿಕ ಮೆರವಣಿಗೆಯನ್ನು ಕೇಸರಿ ಧ್ವಜದ ಮೂಲಕ ಉದ್ಘಾಟಿಸುವುದು ಸಂಪ್ರದಾಯ. ಅದರಲ್ಲಿ ತಪ್ಪು ಹುಡುಕುವುದು ಕಾಂಗ್ರೆಸ್‌ಗೆ ಚಟವಾಗಿದೆ” ಎಂದು ಆಕ್ರೋಶ ಹೊರಹಾಕಿದ್ದಾರೆ.
ಸಂವಿಧಾನದ ತಪ್ಪಾದ ವ್ಯಾಖ್ಯಾನ ಬೇಡ
ಜೋಡುಕಟ್ಟೆಯಿಂದ ಆರಂಭವಾದ ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿಗಳು ಭಾಗವಹಿಸಿರುವುದು ಸಂವಿಧಾನ ವಿರೋಧಿ ಎಂದು ಬಿಂಬಿಸುತ್ತಿರುವ ಕಾಂಗ್ರೆಸ್ ನಡೆಯನ್ನು ಸುನೀಲ್ ಕುಮಾರ್ ಪ್ರಶ್ನಿಸಿದ್ದಾರೆ. ಮುಸ್ಲಿಂ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಅಧಿಕಾರಿಗಳು ಪಾಲ್ಗೊಂಡಾಗ ಇದೇ ರೀತಿ ಕ್ರಮಕ್ಕೆ ಆಗ್ರಹಿಸುವ ಧೈರ್ಯ ಕಾಂಗ್ರೆಸ್‌ಗೆ ಇದೆಯೇ ಎಂದು ಅವರು ಸವಾಲು ಹಾಕಿದ್ದಾರೆ.
ಈಗಾಗಲೇ ಈ ಬಗ್ಗೆ ಸ್ಪಷ್ಟನೆ ನೀಡಿರುವ ಜಿಲ್ಲಾಧಿಕಾರಿಗಳು, ನಗರಸಭೆಯ ಆಡಳಿತಾಧಿಕಾರಿಯಾಗಿ ಅಧಿಕೃತ ಕರ್ತವ್ಯದ ಭಾಗವಾಗಿ ತಾವು ಪರ್ಯಾಯದಲ್ಲಿ ಪಾಲ್ಗೊಂಡಿರುವುದಾಗಿ ತಿಳಿಸಿದ್ದಾರೆ. ಆದರೂ ರಾಜಕೀಯ ಲಾಭಕ್ಕಾಗಿ ಕಾಂಗ್ರೆಸ್ ಅಲ್ಪಸಂಖ್ಯಾತರ ಓಲೈಕೆಯಲ್ಲಿ ತೊಡಗಿದೆ ಎಂದು ಸುನೀಲ್ ಕುಮಾರ್ ಆರೋಪಿಸಿದ್ದಾರೆ.



































