
ಉಡುಪಿ: ಕೇಂದ್ರ ಸರ್ಕಾರವು ಗ್ರಾಮೀಣ ಭಾಗದ ಆರ್ಥಿಕ ಸಬಲೀಕರಣಕ್ಕಾಗಿ ಜಾರಿಗೆ ತಂದಿರುವ ಮಹತ್ವಾಕಾಂಕ್ಷೆಯ ‘ವಿಕಸಿತ ಭಾರತ – ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್’ (VB-G RAM G) ಯೋಜನೆಯ ಬಗ್ಗೆ ಸಾರ್ವಜನಿಕರಲ್ಲಿ ವ್ಯಾಪಕ ಅರಿವು ಮೂಡಿಸಲು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬೃಹತ್ ಸಮಾವೇಶವನ್ನು ಆಯೋಜಿಸಲಾಗಿದೆ.
ದಿನಾಂಕ 31 ಜನವರಿ, ಶನಿವಾರದಂದು ಮಧ್ಯಾಹ್ನ 3.00 ಗಂಟೆಗೆ ಉಡುಪಿಯ ಕುಂಜಿಬೆಟ್ಟು ಶಾರದಾ ಕಲ್ಯಾಣ ಮಂಟಪದ ಸಭಾಂಗಣದಲ್ಲಿ ಈ ಜಿಲ್ಲಾ ಮಟ್ಟದ ಜಾಗೃತಿ ಸಮಾವೇಶವು ನಡೆಯಲಿದೆ.
ಬಿಜೆಪಿ ಜಿಲ್ಲಾಧ್ಯಕ್ಷರಾದ ಕುತ್ಯಾರು ನವೀನ್ ಶೆಟ್ಟಿ ಅವರ ನೇತೃತ್ವದಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ರಾಜ್ಯ ರೈತ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಡಾ! ನವೀನ್ ಅವರು ವಿಶೇಷ ಉಪಸ್ಥಿತರಿರಲಿದ್ದಾರೆ. ಈ ಹೊಸ ಯೋಜನೆಯು ಈ ಹಿಂದೆ ಚಾಲ್ತಿಯಲ್ಲಿದ್ದ ನರೇಗಾ (MGNREGA) ಯೋಜನೆಯ ಬದಲಿಗೆ ಜಾರಿಗೆ ಬಂದಿದ್ದು, ಗ್ರಾಮೀಣ ಕುಟುಂಬಗಳಿಗೆ ವಾರ್ಷಿಕ 125 ದಿನಗಳ ಉದ್ಯೋಗ ಖಾತರಿಯನ್ನು ನೀಡುವ ಪ್ರಮುಖ ಅಂಶಗಳನ್ನು ಒಳಗೊಂಡಿದೆ.
ಸಮಾವೇಶದಲ್ಲಿ ಜಿಲ್ಲೆಯ ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ಮಾಜಿ ಜನಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ. ಅಲ್ಲದೆ, ಜಿಲ್ಲಾ ಮತ್ತು ತಾಲೂಕು ಪಂಚಾಯತ್‌ಗಳ ನಿಕಟಪೂರ್ವ ಸದಸ್ಯರು, ವಿವಿಧ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತ್‌ಗಳ ಸದಸ್ಯರು ಭಾಗವಹಿಸಲಿದ್ದಾರೆ. ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್‌ಗಳ ಅಧ್ಯಕ್ಷರು ಮತ್ತು ಉಪಾಧ್ಯಕ್ಷರಿಗೂ ಈ ಸಮಾವೇಶದಲ್ಲಿ ಪಾಲ್ಗೊಳ್ಳಲು ಆಹ್ವಾನ ನೀಡಲಾಗಿದ್ದು, ಯೋಜನೆಯ ಲಾಭವನ್ನು ಕಟ್ಟಕಡೆಯ ವ್ಯಕ್ತಿಗೂ ತಲುಪಿಸುವ ನಿಟ್ಟಿನಲ್ಲಿ ಚರ್ಚೆಗಳು ನಡೆಯಲಿವೆ.



































