
ವಾರಣಾಸಿ : ಉತ್ತರ ಪ್ರದೇಶದ ವಾರಾಣಸಿಯಲ್ಲಿ ನಡೆದ ಅಮಾನವೀಯ ಅತ್ಯಾಚಾರ ಪ್ರಕರಣ ದೇಶದಾದ್ಯಂತ ಆಕ್ರೋಶ ಮೂಡಿಸಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಪೊಲೀಸ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
ಶುಕ್ರವಾರ ವಾರಾಣಾಸಿಗೆ ಭೇಟಿ ನೀಡಿದ್ದ ಪ್ರಧಾನಿ ಮೋದಿ, ಇತ್ತೀಚೆಗೆ ನಡೆದ ಕ್ರಿಮಿನಲ್ ಘಟನೆಗಳ ಬಗ್ಗೆ ಪರಿಶೀಲನೆ ನಡೆಸಿದ ಸಂದರ್ಭ ಈ ಅತ್ಯಾಚಾರ ಪ್ರಕರಣದ ಕುರಿತಂತೆ ವಾರಾಣಾಸಿ ಪೊಲೀಸ್ ಕಮಿಷನರ್, ವಿಭಾಗೀಯ ಆಯುಕ್ತ ಹಾಗೂ ಜಿಲ್ಲಾಧಿಕಾರಿಗಳಿಂದ ವಿವರವಾದ ಮಾಹಿತಿಯನ್ನು ಪಡೆದುಕೊಂಡರು. ನಂತರ, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ತಪ್ಪಿತಸ್ಥರ ವಿರುದ್ಧ ತಕ್ಷಣವೇ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ಭವಿಷ್ಯದಲ್ಲಿ ಇಂತಹ ಘಟನೆಗಳು ಪುನರಾವೃತವಾಗದಂತೆ ಕಟ್ಟುನಿಟ್ಟಿನ ಕ್ರಮ ಜಾರಿಗೆ ತರಬೇಕು ಎಂದು ಆದೇಶಿಸಿದರು.
ಈ ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಒಟ್ಟು 9 ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಉಳಿದ ಆರೋಪಿಗಳನ್ನು ಕೂಡ ಶೀಘ್ರದಲ್ಲೇ ಬಂಧಿಸಲಾಗುವುದು ಎಂಬ ಭರವಸೆಯನ್ನೂ ಅವರು ವ್ಯಕ್ತಪಡಿಸಿದ್ದಾರೆ.
ಸಂತ್ರಸ್ತೆ ಲಾಲ್‌ಪುರ ಪಾಂಡೆಪುರ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನಲ್ಲಿ, ಆಕೆಗೆ ಅಮಲು ಪದಾರ್ಥಗಳನ್ನು ನೀಡಿ ಒಟ್ಟೂ 23 ಮಂದಿ ಏಳು ದಿನಗಳ ಕಾಲ ನಿರಂತರವಾಗಿ ಅತ್ಯಾಚಾರ ಎಸಗಿದ್ದಾರೆ ಎಂದು ಉಲ್ಲೇಖಿಸಲಾಗಿದೆ. ಈ ಘಟನೆ ಕ್ರೂರತೆಯ ಅತ್ಯುತ್ತಮ ಉದಾಹರಣೆಯಾಗಿದ್ದು, ಮಹಿಳಾ ಸುರಕ್ಷತೆ ಕುರಿತಾಗಿ ಗಂಭೀರ ಚರ್ಚೆಗೆ ದಾರಿ ಮಾಡಿಕೊಟ್ಟಿದೆ.