
ಕಾರ್ಕಳ: ಕಾಂಗ್ರೆಸ್ ಪಕ್ಷಕ್ಕೆ ಕಾರ್ಯಕರ್ತರು ಪ್ರಮುಖ ಆಸ್ತಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಕಾರ್ಕಳದ ಕಾಂಗ್ರೆಸ್ ಕಚೇರಿಗೆ ಶುಕ್ರವಾರ ಭೇಟಿ ನೀಡಿದ ಅವರು, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾರ್ಕಳದಿಂದ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಶತಸಿದ್ಧ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕಳೆದ ಚುನಾವಣೆಯಲ್ಲಿ ಉದಯ್ ಶೆಟ್ಟಿ ಅವರಿಗೆ ಉತ್ತಮ ಅವಕಾಶವಿತ್ತು, ಆದರೆ ಅದೃಷ್ಟ ಕೈಕೊಟ್ಟಿತ್ತು ಎಂದು ಹೇಳಿದ ಸಚಿವರು, ಸೋಲು ಗೆಲುವಿನ ಮೆಟ್ಟಿಲು. ಉದಯ್ ಶೆಟ್ಟಿ ಅವರು ಜನರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಮುಂದಿನ ಬಾರಿ ಅವರ ಗೆಲುವು ಖಚಿತ ಎಂದರು.

ಈ ಸಂದರ್ಭದಲ್ಲಿ ಸಚಿವರು ಕಾರ್ಕಳದ ನೂತನ ಪತ್ರಿಕಾ ಭವನಕ್ಕೆ ಭೇಟಿ ನೀಡಿದರು. ಇದೇ ವೇಳೆ ಸಚಿವರನ್ನು ಪತ್ರಕರ್ತರ ಸಂಘದ ವತಿಯಿಂದ ಸನ್ಮಾನಿಸಲಾಯಿತು. ಪತ್ರಿಕಾ ಭವನ ನಿರ್ಮಾಣಕ್ಕೆ ನಿವೇಶನ ಒದಗಿಸುವ ಕುರಿತು ಪರಿಶೀಲಿಸುವಂತೆ ಜಿಲ್ಲಾಧಿಕಾರಿ ಟಿ.ಕೆ.ಸ್ವರೂಪ ಅವರಿಗೆ ಸೂಚನೆ ನೀಡಿದರು. ಈ ವೇಳೆ ಕಾಂಗ್ರೆಸ್ ಮುಖಂಡ ಉದಯ್ ಶೆಟ್ಟಿ, ಜಿಲ್ಲಾಧಿಕಾರಿ ಟಿ.ಕೆ.ಸ್ವರೂಪ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.