
ಇರ್ವತ್ತೂರು/ಕೊಳಕೆ: ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಸಾಧನೆ ಮಾಡಿ ರಾಜ್ಯಮಟ್ಟಕ್ಕೆ ಆಯ್ಕೆಯಾಗುವ ಮೂಲಕ ಗ್ರಾಮಕ್ಕೆ ಹೆಮ್ಮೆ ತಂದಿರುವ ಸುದ್ಧಿ ವರದಿಯಾಗಿದೆ. ಇರ್ವತ್ತೂರು ಗ್ರಾಮದ ಕೊಳಕೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 14 ವರ್ಷದೊಳಗಿನ ವಿದ್ಯಾರ್ಥಿ ಅಂಕಿತ್, ವಾಲಿಬಾಲ್ ಪಂದ್ಯಾಟದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ಗಮನ ಸೆಳೆದಿದ್ದಾರೆ.
ಶಾಲಾ ಶಿಕ್ಷಣದೊಂದಿಗೆ ಕ್ರೀಡಾ ಚಟುವಟಿಕೆಗಳಲ್ಲೂ ಸಕ್ರಿಯವಾಗಿ ಭಾಗವಹಿಸುತ್ತಿದ್ದ ಅಂಕಿತ್‌ಗೆ, ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಆನಂದ್ ಪೂಜಾರಿ ಅವರು ವಿಶೇಷ ತರಬೇತಿ ಮತ್ತು ಮಾರ್ಗದರ್ಶನ ನೀಡಿದ್ದರು. ಈ ತರಬೇತಿಯ ಫಲವಾಗಿ ವಿದ್ಯಾರ್ಥಿ ಅಂಕಿತ್, ಬಾಲಕರ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ರಾಜ್ಯ ಮಟ್ಟದ ಸ್ಪರ್ಧೆಗೆ ಅರ್ಹತೆ ಪಡೆದಿದ್ದಾರೆ.
ಅಂಕಿತ್ ಅವರ ಈ ಕ್ರೀಡಾ ಸಾಧನೆಗೆ ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ, ಮತ್ತು ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದ್ದಾರೆ. ಇರ್ವತ್ತೂರಿನ ಮಲಿಯಾಳಿಕಟ್ಟೆ ನಾರಾಯಣ ಮತ್ತು ಶೋಭಾ ದಂಪತಿಗಳ ಸುಪುತ್ರನಾದ ಅಂಕಿತ್, ತನ್ನ ಉತ್ಸಾಹ ಮತ್ತು ಪರಿಶ್ರಮದಿಂದ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಪ್ರವೇಶ ಪಡೆದಿದ್ದಾರೆ.
ಕ್ರೀಡಾ ಪ್ರತಿಭೆಯನ್ನು ಗುರುತಿಸಿ ತರಬೇತಿ ನೀಡಿದ ದೈಹಿಕ ಶಿಕ್ಷಣ ಶಿಕ್ಷಕ ಆನಂದ್ ಪೂಜಾರಿ ಅವರ ಪ್ರಯತ್ನ ಶ್ಲಾಘನೀಯವಾಗಿದೆ ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ. ರಾಜ್ಯ ಮಟ್ಟದಲ್ಲಿ ಅಂಕಿತ್ ಉತ್ತಮ ಪ್ರದರ್ಶನ ನೀಡಲಿ ಎಂದು ಶುಭ ಹಾರೈಸಿದ್ದಾರೆ.