
ರಾಜ್ಯದ ಸರಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರ ಸಾವಿನ ಸಂಖ್ಯೆ ಹೆಚ್ಚುತ್ತಿರುವುದು ಆತಂಕಕಾರಿ ವಿಚಾರವಾಗಿದ್ದು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಸಂಧ್ಯಾ ರಮೇಶ್ ಒತ್ತಾಯಿಸಿದ್ದಾರೆ.
ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸಾವುಗಳ ನೈಜ ಕಾರಣವನ್ನು ಹೊರತರುವ ಉದ್ದೇಶದಿಂದ ಹೈಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತನಿಖೆ ನಡೆಸುವ ಅಗತ್ಯವಿದೆ ಎಂದು ಹೇಳಿದರು.
ಕಾಂಗ್ರೆಸ್ ಸರ್ಕಾರವನ್ನು ಟೀಕಿಸಿದ ಸಂಧ್ಯಾ ರಮೇಶ್, ಕಳೆದ 19 ತಿಂಗಳಲ್ಲಿ 6 ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಂಡಿರುವುದರೊಂದಿಗೆ 700 ಗರ್ಭಿಣಿಯರು ಮತ್ತು 1100ಕ್ಕೂ ಹೆಚ್ಚು ನವಜಾತ ಶಿಶುಗಳು ಸಾವಿಗೀಡಾಗಿದ್ದಾರೆ ಎಂದು ಆರೋಪಿಸಿದರು. ಕೇಂದ್ರ ಸರ್ಕಾರದ ಜನನಿ ಸುರಕ್ಷಾ ಯೋಜನೆ ಹಾಗೂ ಜನನಿ ಶಿಶು ಸುರಕ್ಷಾ ಕಾರ್ಯಕ್ರಮವನ್ನು ರಾಜ್ಯ ಸರ್ಕಾರ ಯಶಸ್ವಿಯಾಗಿ ಅನುಷ್ಠಾನಗೊಳಿಸಲು ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಅಸ್ಥಿರ ಸ್ಥಿತಿ, ಸಿಬ್ಬಂದಿ ಕೊರತೆ ಮತ್ತು ಸರಕಾರದ ನಿರ್ಲಕ್ಷ್ಯವನ್ನು ಅವರು ತೀವ್ರವಾಗಿ ಟೀಕಿಸಿದರು. ಸಾವಿಗೀಡಾದ ಬಾಣಂತಿಯರ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಬೇಕು ಮತ್ತು ಅನಾಥಗೊಂಡ ಮಕ್ಕಳ ಭವಿಷ್ಯದ ಹೊಣೆಗಾರಿಕೆ ಸರ್ಕಾರವೇ ಹೊರುವಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ್ ಶೆಟ್ಟಿ ಮತ್ತು ಕಾರ್ಯದರ್ಶಿ ರಾಘವೇಂದ್ರ ಕುಂದರ್ ಉಪಸ್ಥಿತರಿದ್ದರು.